ಬುಧವಾರ, ಸೆಪ್ಟೆಂಬರ್ 4, 2013

ಶ್ರೀ ರಾಮನವಮಿಯ ದಿವಸ

ಶ್ರೀ ರಾಮನವಮಿಯ ದಿವಸ

ಶ್ರೀ ರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ಧೋಟಗಳ ಹೋಳು, ಸೀಕರಣೆ;
ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ.

ಕಾದು ಗಾರಾದ ಮಣ್ಣೊಡಲಿನೊಳಗಡೆಗೆ ಕಿಡಿ-
ಕುಳಿತ ಮೂಲಾಧಾರ ಜೀವಧಾತು
ಮೋಡದ ಸಹಸ್ರಾರದೆಡೆಗೆ ತುಡಿಯುವ ತುರುಸು;
ಮೆಣ್ಣೊಡೆದು ಹಸುರು ಹೂ ಹುಲ್ಲು ಮುಳ್ಳು.

ಮಣ್ಣುಟ್ಟ ಪುಟ್ಟ ಬಿತ್ತಕ್ಕೆ ಮಳೆಹನಿಸೇಕ:
ಅಶ್ವತ್ಥದ ವಿವರ್ತ ನಿತ್ಯ ಘಟನೆ;
ಗುಮ್ಮಟಗಿರಿಯ ನೆತ್ತಿಯಲ್ಲಿ ಕಲ್ಲರಳಿದ್ದು
ಕಾರ್ಯಕಾರಣದೊಂದಪೂರ್ವ ನಟನೆ.

ನೆಲಕ್ಕಂಟಿ ಬಿದ್ದ ಅಕಾಶಯಾನದ ಕನಸು
ಜೆಟ್ ವಿಮಾನವನೇರಿ ಕೊಂಚ ದೂರ
ತೇಲಿ ಮಣ್ಣಿಗೆ ಮರಳಿ, ರಾಕೆಟ್ಟು ಜಗಿದುಗುಳಿ
ತಿಂಗಳಿಗೆ ಬಡಿವಾಧುನಿಕ ವಿಕಾರ.

ವೇದೋಪನಿಷದಗಳ ಭೂತಗನ್ನಡಿಯೊಳಗೆ
ಪಡಿಮೂಡಿದಾಕೃತಿಗೆ ತಾನೆ ಮುಗ್ಧ
ಮತ್ಸ್ಯಕೂರ್ಮವರಾಹ ಮೆಟ್ಟಲುಗಳೇರುತ್ತ
ಹುತ್ತಗಟ್ಟಿದ ಕೈ ಕಡೆದ ನೋಟ.

ಕೌಸಲ್ಯೆದಶರಥರ ಪುತ್ರಕಾಮೇಷ್ಟಿಗೆರೆ
ಹಠಾತ್ತಾಗಿ ತಾಗಿರೆ ತ್ರಿಕಾಲ ಚಕ್ರ,
ಆಸ್ಪೋಟಿಸಿತ್ತು ಸಿಡಿತಲೆ; ಗರಿಷ್ಟ ತೇಜದ ಮೊನೆ
ಕೆಳಪಟ್ಟು ಮಣ್ಣುಟ್ಟು ನಿಂತ ಘಟನೆ;

ಬೆಳ್ಳಂಬೆಳಕಿನಲಿ ಬಿಳಿಹಾಯಿಗಳ ಪರದಾಟ,
ಹಾಲ್ಗಡಲ ಬಗೆದೊಲೆವ ರಾಜಹಂಸ;
ಅಂತರಂಗದ ಸುರುಳಿ ಬಿಚ್ಚಿ ಸರ್ಚ್ ಲೈಟಲ್ಲಿ
ಹೆದ್ದಾರಿ ಹಾಸಿದ್ದ ರಾಮಚರಿತ.

ಸಂಕಲ್ಪ ಬಲದ ಜಾಗರಣೆ; ಕತ್ತಲಿನೆಡೆಗೆ
ಕಣೆ; ದಂಡಕಾರಣ್ಯಕ್ಕೆ ಹಗಲ ದೊಣ್ಣೆ;
ಮಣ್ಣಿನಣುಗಿಯ ಸೆಳವಿನಲ್ಲಿ ಲಂಕೆಗೆ ಬೆಂಕಿ;
ಸುಟ್ಟಲ್ಲದೇ ಮುಟ್ಟೆನೆಂಬುಡಾಫೆ.

ವಿಜ್ರಂಭಿಸಿತು ರಾಮಬಾಣ; ನಿಜ ಕತ್ತಲಿಗೆ
ಹತ್ತೆ ತಲೆ? ನೂರಾರೆ? ಅದು ಅಸಂಖ್ಯ;
ಕತ್ತರಿಸಿದರೆ ಬೆಳೆವ, ಬೆಳೆದು ಕತ್ತಿಗೆ ಬರುವ
ಅನಾದಿ; ಕೋದಂಡದಂಡವೂ ಹೀಗೆ ದಂಡ;

ಅಥವಾ ಚಕ್ರಾರಪಂಕ್ತಿ; ಚಕಮಕಿ ಕಲ್ಲನ್ನುಜ್ಜುತ್ತ
ಕೂತುಕೊಂಡಿದ್ದೇನೆ ಕತ್ತಲೊಳಗೆ,
ಪನಿವಾರ ತಿಂದು ಪಾನಕ ಕುಡಿದು ನೋಡುತ್ತ
ಸ್ಪೋಟಕ್ಕೆ ಕಾದು ಕಿವಿ ಕಂಪಿಸುತ್ತ.

ಷಟ್ಚಕ್ರ ರಾಕೆಟ್ಟುಗಳ ಹಂತಹಂತಕ್ಕೆ
ಅಂಚೆ ತಲುಪೀತೆ ಸಹಸ್ರಾರಕೆ?
ಹುತ್ತಗಟ್ಟದೇ ಚಿತ್ತ ಮತ್ತೆ ಕೆತ್ತೀತೇನು
ಪುರುಷೋತ್ತಮನ ಆ ಅಂಥ ರೂಪ-ರೇಖೆ?

ಸಾಹಿತ್ಯ: ಡಾ. ಗೋಪಾಲಕೃಷ್ಣ ಅಡಿಗTag: Sri ramanavamiya divasa

ಕಾಮೆಂಟ್‌ಗಳಿಲ್ಲ: