ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಹಕ್ಕಿ ಹಾರುತಿದೆ ನೋಡಿದಿರಾ?


ಹಕ್ಕಿ ಹಾರುತಿದೆ ನೋಡಿದಿರಾ?

ಇರುಳಿರಳಳಿದು ದಿನದಿನ ಬೆಳಗೆ
ಸುತ್ತಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದಕೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?

ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?

ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?

ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?

ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?

ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?

ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ?

ಸಾಹಿತ್ಯ: ಅಂಬಿಕಾತನಯದತ್ತ 


ಬೇಂದ್ರೆಯವರು ಈ ಕವನದಲ್ಲಿ ಕಾಲವನ್ನು ಹಾರುವ ಹಕ್ಕಿಗೆ  ಹೋಲಿಸುತ್ತಿದ್ದಾರೆ.  ಈ ಪಕ್ಷಿ ಕೇವಲ ಸಮಯದ ಪಕ್ಷಿ ಮಾತ್ರವಾಗಿರದೆ ವಿಶ್ವವನ್ನೇ ಬದಲಿಸುತ್ತಿರುವ ಚೈತನ್ಯ ಸ್ವರೂಪವೇ ಆಗಿದೆ.

Tag: Hakki Haarutide Nodidira

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ