ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಎಲ್ಲ ಮರೆತಿರುವಾಗ


ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವ
ಹೂಡಿ ಬರದಿರು ಮತ್ತೆ ಹಳೆಯ ನೆನಪೇ;
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆ ಏಕೆ, ಮಧುರ ನೆನಪೇ?

ಕಪ್ಪು ಕಣ್ಣಿನ ನೆಟ್ಟ ನೋಟದರೆಚಣವನ್ನೆ
ತೊಟ್ಟು ಬಾಣದ ಹಾಗೆ ಬಾರದಿರು ನೆನಪೇ;
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನೆ
ಹಿರಿದು ಕೊಲ್ಲಲು ಬಳಿಗೆ ಸಾರದಿರು ನೆನಪೇ.
ಎಲ್ಲ ಮರೆತಿರುವಾಗ....

ಸತ್ತ ಭೂತವನೆತ್ತಿ ಹದ್ದಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ;
ಭವ್ಯ ಭವಿತವ್ಯಕ್ಕೆ ಮೊಗ ಮಾಡಿ ನಿಂತಿರುವೆ,
ಬೆನ್ನಲ್ಲೆ ಇರಿಯದಿರು, ಓ! ಚೆನ್ನ ನೆನಪೇ,
ಎಲ್ಲ ಮರೆತಿರುವಾಗ.....

ಸಾಹಿತ್ಯ: ಕೆ. ಎಸ್. ನಿಸಾರ್ ಅಹಮದ್



Tag: Ella Maretiruvaga

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ