ಸಾಂಸ್ಕೃತಿಕ ಪ್ರೀತಿಯ ಕನ್ನಡದ ಕಿಂಡಿ

ಪಯಣಿಸುವ ವೇಳೆಯಲಿ


ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ
ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ
ಇನ್ನೆಂದು ಬರುವಿರೆಂದೆನ್ನ ಕೇಳಿದಳು
ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು

ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ
ಕಣ್ಣಿರಲು ತಿಳಿಬಾನ ಕಿರುತಾರೆಯಂತೆ
ವೇಣಿಯಿರಲು ವಸಂತ ಪುಷ್ಪವನದಂತೆ
ಮನಸು ಬಾರದು ನನಗೆ ಅಡಿಯನಿಡೆ ಮುಂದೆ

ಅಲ್ಲಲ್ಲಿ ನಿಂದವಳ ನೋಡುತಡಿಗಡಿಗೆ
ತೆರಳಿದೆನು ವಿರಹದಲಿ ನಿಲ್ದಾಣದೆಡೆಗೆ
ದಾರಿಯಲೆ ಕಂಡೊಬ್ಬ ಹಣ್ಣು ಮಾರುವನು
ಹೊರಟು ಹೋದುದು ಬಂಡಿ ಎಂದು ಹೇಳಿದನು

ಹಿಂದಿರುಗಿ ಬಂದೆನ್ನ ಒಂದೆ ಮಾತಿನಲಿ
ತಿಂಗಳಾಯಿತೆ ಎಂದಳೆನ್ನ ಹೊಸ ಹುಡುಗಿ

ಸಾಹಿತ್ಯ:  ಕೆ. ಎಸ್. ನರಸಿಂಹಸ್ವಾಮಿ


Tag: Payanisuva veleyali

ಕಾಮೆಂಟ್‌ಗಳು

ತಮ್ಮ ಸಲಹೆಗಳಿಗೆ ಸುಸ್ವಾಗತ!

ಚಿತ್ರ ಕೃಪೆ: ಎಂ.ಪಿ.ಎಂ. ನಟರಾಜಯ್ಯ